मौसम क्रिकेट ऑपरेशन सिंदूर क्रिकेट स्पोर्ट्स बॉलीवुड जॉब - एजुकेशन बिजनेस लाइफस्टाइल देश विदेश राशिफल आध्यात्मिक अन्य

ಮಳೆಗಾಗಿ ಕಾಫಿನಾಡಿನಲ್ಲಿ ವಿಶೇಷ ಪ್ರಾರ್ಥನೆ: ಕಿಗ್ಗಾದ ಋಷ್ಯಶೃಂಗೇಶ್ವರನಿಗೆ ಏಕ ರುದ್ರಾಭಿಷೇಕ, ಪರ್ಜನ್ಯ ಜಪ!

 

​ಚಿಕ್ಕಮಗಳೂರು: ರಾಜ್ಯದಲ್ಲಿ ಉತ್ತಮ ಮಳೆಯಾಗಲಿ ಎಂದು ಮುಖ್ಯಮಂತ್ರಿಗಳು ನೀಡಿದ ಸೂಚನೆಯ ಮೇರೆಗೆ, ಕಾಫಿನಾಡು ಚಿಕ್ಕಮಗಳೂರಿನಲ್ಲಿ ಮಳೆಗಾಗಿ ವಿಶೇಷ ಪೂಜೆ ಮತ್ತು ಪ್ರಾರ್ಥನೆಗಳನ್ನು ಸಲ್ಲಿಸಲಾಗಿದೆ. ಮಳೆ ದೇವರೆಂದೇ ಪ್ರಸಿದ್ಧಿ ಪಡೆದಿರುವ ಶೃಂಗೇರಿ ತಾಲೂಕಿನ ಕಿಗ್ಗಾದ ಇತಿಹಾಸ ಪ್ರಸಿದ್ಧ ಶ್ರೀ ಋಷ್ಯಶೃಂಗೇಶ್ವರ ಸ್ವಾಮಿ ಸನ್ನಿಧಿಯಲ್ಲಿ ಈ ವಿಶೇಷ ಧಾರ್ಮಿಕ ಕಾರ್ಯಕ್ರಮಗಳು ನಡೆದಿವೆ.

​ಶಾಸಕ ಟಿ.ಡಿ. ರಾಜೇಗೌಡ ಸಮ್ಮುಖದಲ್ಲಿ ವಿಶೇಷ ಪೂಜೆ

​ಶೃಂಗೇರಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಟಿ.ಡಿ. ರಾಜೇಗೌಡ ಅವರ ಸಮ್ಮುಖದಲ್ಲಿ ಈ ವಿಶೇಷ ಪೂಜಾ ಕೈಂಕರ್ಯಗಳು ಜರುಗಿದವು. ಮಳೆಯ ಅಭಾವದಿಂದ ಕಂಗಾಲಾಗಿರುವ ಜನತೆ ಹಾಗೂ ರೈತಾಪಿ ವರ್ಗಕ್ಕೆ ಅನುಕೂಲವಾಗಲಿ ಮತ್ತು ನಾಡು ಸುಭಿಕ್ಷವಾಗಿರಲಿ ಎಂಬ ಉದ್ದೇಶದಿಂದ ಶಾಸಕರು ದೇವರಲ್ಲಿ ವಿಶೇಷವಾಗಿ ಪ್ರಾರ್ಥಿಸಿದರು.

​ಏಕ ರುದ್ರಾಭಿಷೇಕ ಮತ್ತು ಪರ್ಜನ್ಯ ಜಪ

​ಕ್ಷೇತ್ರದ ಇತಿಹಾಸ ಪ್ರಸಿದ್ಧ ಶ್ರೀ ಋಷ್ಯಶೃಂಗೇಶ್ವರ ದೇವಸ್ಥಾನದಲ್ಲಿ ಆರು ಜನ ಪರಿಣಿತ ಋತ್ವಿಜರ ನೇತೃತ್ವದಲ್ಲಿ ಶಾಸ್ತ್ರೋಕ್ತವಾಗಿ ಧಾರ್ಮಿಕ ವಿಧಿವಿಧಾನಗಳನ್ನು ನೆರವೇರಿಸಲಾಯಿತು. ಮಳೆಯನ್ನು ಕರುಣಿಸುವಂತೆ ಕೋರಿ ಋತ್ವಿಜರು ಏಕ ರುದ್ರಾಭಿಷೇಕ ಹಾಗೂ ಶಕ್ತಿಶಾಲಿ ಪರ್ಜನ್ಯ ಜಪವನ್ನು ಸತತವಾಗಿ ಪಠಿಸಿದರು.

​ಕಿಗ್ಗಾದ ಋಷ್ಯಶೃಂಗೇಶ್ವರನ ಮಹತ್ಶಕ್ತಿ:

ಪುರಾಣ ಹಾಗೂ ಇತಿಹಾಸ ಪ್ರಸಿದ್ಧ ಕಿಗ್ಗಾದ ಋಷ್ಯಶೃಂಗೇಶ್ವರ ಸ್ವಾಮಿಗೆ ಪೂಜೆ ಸಲ್ಲಿಸಿದರೆ ಒಣಗಿದ ಭೂಮಿಗೂ ಮಳೆ ಬರುತ್ತದೆ ಎಂಬ ಬಲವಾದ ನಂಬಿಕೆ ತಲೆಮಾರುಗಳಿಂದ ನಡೆದುಬಂದಿದೆ. ಬರಗಾಲದ ಸಂದರ್ಭದಲ್ಲಿ ಇಲ್ಲಿ ಪೂಜೆ ಸಲ್ಲಿಸುವುದು ಮಲೆನಾಡಿನ ಭಾಗದಲ್ಲಿ ಇಂದಿಗೂ ನಡೆದುಕೊಂಡು ಬರುತ್ತಿರುವ ಪದ್ಧತಿಯಾಗಿದೆ.

​ಈ ಸಂದರ್ಭದಲ್ಲಿ ಸ್ಥಳೀಯ ಜನಪ್ರತಿನಿಧಿಗಳು, ದೇವಸ್ಥಾನದ ಆಡಳಿತ ಮಂಡಳಿ ಪದಾಧಿಕಾರಿಗಳು ಹಾಗೂ ನೂರಾರು ಭಕ್ತಾದಿಗಳು ಉಪಸ್ಥಿತರಿದ್ದು, ಮಳೆಗಾಗಿ ಋಷ್ಯಶೃಂಗೇಶ್ವರನಲ್ಲಿ ಜಂಟಿಯಾಗಿ ಪ್ರಾರ್ಥನೆ ಸಲ್ಲಿಸಿದರು.

ಕೋರ್ಟ್ ಸ್ಫೋಟಿಸುವುದಾಗಿ ದುಷ್ಕರ್ಮಿಗಳ ಸಂದೇಶ ಶ್ವಾನದಳದಿಂದ ತೀವ್ರ ಶೋಧ

ಚಿಕ್ಕಮಗಳೂರಿನ ಜಿಲ್ಲಾ ನ್ಯಾಯಾಲಯಕ್ಕೆ ಬಂದಿರುವ ಬಾಂಬ್ ಬೆದರಿಕೆ ಇ-ಮೇಲ್ ಆತಂಕಕ್ಕೆ ಕಾರಣವಾಗಿದೆ. ಮಧ್ಯಾಹ್ನ 1.30 ರಿಂದ 3.30 ರ ಅವಧಿಯಲ್ಲಿ ಕೋರ್ಟ್ ಆವರಣವನ್ನು ಸ್ಫೋಟಿಸುವುದಾಗಿ ದುಷ್ಕರ್ಮಿಗಳು ಕಳುಹಿಸಿರುವ ಸಂದೇಶದಿಂದಾಗಿ ನ್ಯಾಯಾಲಯದ ಆವರಣದಲ್ಲಿ ದಿಢೀರ್ ಬಿಗುವಿನ ವಾತಾವರಣ ನಿರ್ಮಾಣವಾಗಿದೆ.
ವಿಷಯ ತಿಳಿಯುತ್ತಿದ್ದಂತೆ ತಕ್ಷಣವೇ ಅಲರ್ಟ್ ಆಗಿರುವ ಪೊಲೀಸರು, ಬಾಂಬ್ ಪತ್ತೆ ದಳ ಹಾಗೂ ಶ್ವಾನ ದಳದ ಸಿಬ್ಬಂದಿಯೊಂದಿಗೆ ಸ್ಥಳಕ್ಕೆ ಧಾವಿಸಿ ಇಂಚಿಂಚೂ ಜಾಗವನ್ನು ತೀವ್ರ ತಪಾಸಣೆಗೆ ಒಳಪಡಿಸಿದ್ದಾರೆ. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ (ಎಸ್ಪಿ) ಜಿತೇಂದ್ರ ದಾಯ್ಮಾ ಅವರು ಖುದ್ದಾಗಿ ನ್ಯಾಯಾಲಯಕ್ಕೆ ಭೇಟಿ ನೀಡಿ, ಪರಿಸ್ಥಿತಿಯನ್ನು ಪರಿಶೀಲಿಸಿದ್ದಾರೆ. ಅಲ್ಲದೆ ಸಿಬ್ಬಂದಿಯಿಂದ ಮಾಹಿತಿ ಪಡೆದು ಯಾವುದೇ ಅಹಿತಕರ ಘಟನೆ ನಡೆಯದಂತೆ ಸೂಕ್ತ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳುವಂತೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ.
ಈ ಎಲ್ಲ ಆತಂಕ ಮತ್ತು ಕಟ್ಟುನಿಟ್ಟಿನ ತಪಾಸಣೆಯ ನಡುವೆಯೂ ನ್ಯಾಯಾಲಯದ ಕಲಾಪಗಳನ್ನು ಸ್ಥಗಿತಗೊಳಿಸದಂತೆ ನ್ಯಾಯಾಧೀಶರು ಸೂಚನೆ ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ ಕೋರ್ಟ್ ಕಲಾಪಗಳು ಎಂದಿನಂತೆ ಮುಂದುವರಿದಿದ್ದು, ಅದರ ನಡುವೆಯೇ ಪೊಲೀಸರು ಬಿಗಿ ಭದ್ರತೆಯೊಂದಿಗೆ ಆವರಣದ ಒಳಭಾಗದಲ್ಲಿ ಶೋಧ ಕಾರ್ಯವನ್ನು ಚುರುಕುಗೊಳಿಸಿದ್ದಾರೆ. ಇ-ಮೇಲ್ ಮೂಲದ ಪತ್ತೆಗಾಗಿ ಸೈಬರ್ ಕ್ರೈಂ ಪೊಲೀಸರು ಕೂಡ ಕಾರ್ಯಾಚರಣೆಗೆ ಇಳಿದಿದ್ದಾರೆ.