ತರೀಕೆರೆ: ರೈತನೊಬ್ಬನಿಂದ ಖಾತೆ ಬದಲಾವಣೆ ಮಾಡಿಕೊಡಲು ಲಂಚ ಸ್ವೀಕರಿಸುತ್ತಿದ್ದ ಕಂದಾಯ ಇಲಾಖೆಯ ಇಬ್ಬರು ಅಧಿಕಾರಿಗಳು ಲೋಕಾಯುಕ್ತ ಬಲೆಗೆ ಬಿದ್ದಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ತರೀಕೆರೆ ತಾಲೂಕು ಕಚೇರಿಯಲ್ಲಿ ನಡೆದಿದೆ.
ತರೀಕೆರೆ ತಾಲೂಕಿನ ರೈತರೊಬ್ಬರು ತಮ್ಮ ಜಮೀನಿನ ಖಾತೆ ಬದಲಾವಣೆಗಾಗಿ ಕಂದಾಯ ಇಲಾಖೆಗೆ ಅರ್ಜಿ ಸಲ್ಲಿಸಿದ್ದರು. ಈ ಕೆಲಸ ಮಾಡಿಕೊಡಲು ರೆವೆನ್ಯೂ ಇನ್ಸ್ಪೆಕ್ಟರ್ (RI) ರಮೇಶ್ ಹಾಗೂ ಗ್ರಾಮ ಲೆಕ್ಕಾಧಿಕಾರಿ (VA) ಸಂತೋಷ್ ಅವರು 30 ಸಾವಿರ ರೂಪಾಯಿ ಲಂಚಕ್ಕೆ ಬೇಡಿಕೆಯಿಟ್ಟಿದ್ದರು ಎನ್ನಲಾಗಿದೆ.
ಲಂಚ ನೀಡಲು ಇಚ್ಛಿಸದ ರೈತರು ಈ ಬಗ್ಗೆ ಲೋಕಾಯುಕ್ತ ಪೊಲೀಸರಿಗೆ ದೂರು ನೀಡಿದ್ದರು. ಬುಧವಾರ ತಾಲೂಕು ಕಚೇರಿಯಲ್ಲಿ ರೈತನಿಂದ ಲಂಚದ ಹಣ ಸ್ವೀಕರಿಸುತ್ತಿದ್ದ ವೇಳೆ ಲೋಕಾಯುಕ್ತ ಅಧಿಕಾರಿಗಳು ದಿಢೀರ್ ದಾಳಿ ನಡೆಸಿ, ಇಬ್ಬರು ಅಧಿಕಾರಿಗಳನ್ನು ಹಿಡಿದಿದ್ದಾರೆ.
ಲೋಕಾಯುಕ್ತ ಡಿವೈಎಸ್ಪ ತಿರುಮಲೇಶ್ ಅವರ ನೇತೃತ್ವದಲ್ಲಿ ಈ ದಾಳಿ ನಡೆದಿದ್ದು, ಅಧಿಕಾರಿಗಳು ಲಂಚದ ಹಣವನ್ನು ವಶಪಡಿಸಿಕೊಂಡಿದ್ದಾರೆ. ಸದ್ಯ ಇಬ್ಬರು ಆರೋಪಿ ಅಧಿಕಾರಿಗಳನ್ನು ವಶಕ್ಕೆ ಪಡೆದಿರುವ ಲೋಕಾಯುಕ್ತ ಪೊಲೀಸರು ವಿಚಾರಣೆ ಮುಂದುವರಿಸಿದ್ದಾರೆ.
ತಾಲೂಕು ಕಚೇರಿಯ ಆವರಣದಲ್ಲಿಯೇ ಈ ದಾಳಿ ನಡೆದಿರುವುದು ಸಾರ್ವಜನಿಕ ವಲಯದಲ್ಲಿ ಭಾರಿ ಚರ್ಚೆಗೆ ಕಾರಣವಾಗಿದೆ.












Leave a Reply