ಶಾಲಾ ಮಕ್ಕಳನ್ನು ಕರೆದೊಯ್ಯುತ್ತಿದ್ದ ಬಸ್ ಚಾಲನೆ ಮಾಡುತ್ತಿದ್ದ ವೇಳೆ ಚಾಲಕನಿಗೆ ಹೃದಯಾಘಾತ ಸಂಭವಿಸಿ, ಬಸ್ ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಚಾಲಕ ಮೃತಪಟ್ಟಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ತಾಲೂಕಿನ ರಾಷ್ಟ್ರೀಯ ಹೆದ್ದಾರಿ 169ರ ಅಮ್ಮಡಿ ಗ್ರಾಮದ ಬಳಿ ನಡೆದಿದೆ.
ತೀರ್ಥಹಳ್ಳಿ ತಾಲೂಕಿನ ಬಸವಾನಿ ನಿವಾಸಿ ಲಕ್ಷ್ಮಣ (65) ಮೃತಪಟ್ಟ ದುರ್ದೈವಿ.
ಬಸ್ ಚಲಾಯಿಸುತ್ತಿದ್ದ ವೇಳೆ ಲಕ್ಷ್ಮಣ ಅವರಿಗೆ ಏಕಾಏಕಿ ಎದೆನೋವು ಕಾಣಿಸಿಕೊಂಡಿದ್ದು, ಹೃದಯಾಘಾತದಿಂದಾಗಿ ಬಸ್ ಮೇಲಿನ ನಿಯಂತ್ರಣ ತಪ್ಪಿದೆ. ಈ ವೇಳೆ ಬಸ್ ರಸ್ತೆ ಬದಿಯ ಮರಕ್ಕೆ ಡಿಕ್ಕಿ ಹೊಡೆದು ನಿಂತಿದೆ.
ಬಸ್ನಲ್ಲಿದ್ದ ಮಕ್ಕಳಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ತಕ್ಷಣ ಅವರನ್ನು ಕೊಪ್ಪ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ.
ಹೃದಯಾಘಾತದ ನಡುವೆಯೂ ಬಸ್ ಅನ್ನು ಮರಕ್ಕೆ ಡಿಕ್ಕಿ ಹೊಡೆಸಿ ನಿಲ್ಲಿಸುವ ಮೂಲಕ ಚಾಲಕ ತೋರಿದ ಮುಂಜಾಗ್ರತೆಯಿಂದ ಭಾರೀ ಅನಾಹುತವೊಂದು ತಪ್ಪಿದಂತಾಗಿದೆ. ಇಲ್ಲದಿದ್ದರೆ ಬಸ್ನಲ್ಲಿದ್ದ ಮಕ್ಕಳ ಜೀವಕ್ಕೆ ದೊಡ್ಡ ಅಪಾಯ ಎದುರಾಗುವ ಸಾಧ್ಯತೆಯಿತ್ತು.


