ಚಿಕ್ಕಮಗಳೂರು: ಚಾರ್ಮಾಡಿ ಘಾಟ್ ರಸ್ತೆಯಲ್ಲಿ ಸಂಚರಿಸುವ ಪ್ರಯಾಣಿಕರೇ ಹಾಗೂ ಚಾಲಕರೇ ಎಚ್ಚರ! ತಡರಾತ್ರಿ ಹಾಗೂ ಬೆಳಗಿನ ಜಾವದಲ್ಲಿ ಚಾರ್ಮಾಡಿ ಘಾಟಿಯಲ್ಲಿ ಪುಂಡರ ಕಾಟ ಹೆಚ್ಚಾಗಿದ್ದು, ಚಲಿಸುತ್ತಿದ್ದ ಲಾರಿಯೊಂದರ ಮೇಲೆ ಕಲ್ಲು ತೂರಾಟ ನಡೆಸಿರುವ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ.
ಮೂಡಿಗೆರೆ ತಾಲೂಕಿನ ಚಾರ್ಮಾಡಿ ಘಾಟಿಯ ಪ್ರಸಿದ್ಧ ಅಣ್ಣಪ್ಪ ಸ್ವಾಮಿ ದೇಗುಲದ ಬಳಿ ಬೆಳಗಿನ ಜಾವ ಸುಮಾರು 4 ಗಂಟೆಯ ಸುಮಾರಿಗೆ ಈ ಘಟನೆ ನಡೆದಿದೆ.
ಚಿಕ್ಕಮಗಳೂರಿನಿಂದ ಮಂಗಳೂರು ಕಡೆಗೆ ಸಾಗುತ್ತಿದ್ದ ಮಂಗಳೂರು ಮೂಲದ ಲಾರಿಯೊಂದಕ್ಕೆ ರಸ್ತೆಯಲ್ಲಿದ್ದ ನಾಲ್ವರು ಯುವಕರು ಕೈ ತೋರಿಸಿ ನಿಲ್ಲಿಸುವಂತೆ ಸನ್ನೆ ಮಾಡಿದ್ದಾರೆ. ಆದರೆ, ಸಮಯ ಬೆಳಗಿನ ಜಾವವಾಗಿದ್ದರಿಂದ ಚಾಲಕ ಲಾರಿಯನ್ನು ನಿಲ್ಲಿಸದೇ ಮುಂದೆ ಸಾಗಿದ್ದಾರೆ. ಇದರಿಂದ ಆಕ್ರೋಶಗೊಂಡ ಯುವಕರು ಲಾರಿಯ ಮೇಲೆ ಮನಸ್ಸೋಇಚ್ಛೆ ಕಲ್ಲು ತೂರಾಟ ನಡೆಸಿದ್ದಾರೆ.
ಕಲ್ಲು ತೂರಾಟ ನಡೆಸಿದ ನಾಲ್ವರು ಯುವಕರು ಗಾಂಜಾ ಸೇವಿಸಿದ್ದರೆಂಬ ಶಂಕೆ ವ್ಯಕ್ತವಾಗಿದೆ. ಗಾಂಜಾ ಅಮಲಿನಲ್ಲಿಯೇ ಈ ರೀತಿ ಲಾರಿ ಮೇಲೆ ಕಲ್ಲು ತೂರಿ ಪುಂಡಾಟಿಕೆ ನಡೆಸಿದ್ದಾರೆ ಎಂದು ಆರೋಪಿಸಲಾಗಿದೆ.
ಬಣಕಲ್ ಪೊಲೀಸ್ ಠಾಣೆಯ ಸಿಬ್ಬಂದಿ, ಕಲ್ಲು ತೂರಾಟ ನಡೆಸಿದ ನಾಲ್ವರು ಯುವಕರನ್ನು ವಶಕ್ಕೆ ಪಡೆದಿದ್ದಾರೆ. ಆರೋಪಿಗಳು ಗಾಂಜಾ ಸೇವಿಸಿದ್ದಾರೆಯೇ ಎಂಬುದನ್ನು ಖಚಿತಪಡಿಸಿಕೊಳ್ಳಲು ಅವರನ್ನು ವೈದ್ಯಕೀಯ ತಪಾಸಣೆಗೆ (ಮೆಡಿಕಲ್ ಟೆಸ್ಟ್) ಕರೆದೊಯ್ಯಲಾಗಿದೆ.

ಈ ಕುರಿತು ಬಣಕಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ಕಾನೂನು ಕ್ರಮ ಕೈಗೊಂಡಿದ್ದಾರೆ. ಚಾರ್ಮಾಡಿ ಘಾಟ್‌ನಲ್ಲಿ ತಡರಾತ್ರಿ ಪ್ರಯಾಣಿಸುವ ಸಾರ್ವಜನಿಕರು ಹಾಗೂ ಚಾಲಕರು ಜಾಗರೂಕರಾಗಿರಲು ಸೂಚಿಸಲಾಗಿದೆ.








