ಚಿಕ್ಕಮಗಳೂರು ಜಿಲ್ಲೆಯ ತರೀಕೆರೆ ತಾಲೂಕಿನ ಅಮೃತಾಪುರ ಗ್ರಾಮದಲ್ಲಿ ಅಡಿಕೆ ತೋಟದ ಮನೆಯ ನೀರಿನ ತೊಟ್ಟಿಯಲ್ಲಿ ಇಬ್ಬರು ಕಾರ್ಮಿಕರ ಮೃತದೇಹ ಪತ್ತೆಯಾಗಿರುವ ಘಟನೆ ನಡೆದಿದೆ.
ಮೃತರನ್ನು ಆನಂದ್ (48) ಹಾಗೂ ಜುಂಜಾನಾಯ್ಕ್ (65) ಎಂದು ಗುರುತಿಸಲಾಗಿದೆ. ಇಂದು ಬೆಳಗ್ಗೆ ಎಂದಿನಂತೆ ಅಡಿಕೆ ಸುಲಿಯುವ ಕೆಲಸಕ್ಕೆ ತೆರಳಿದ್ದ ಇಬ್ಬರು ಕಾರ್ಮಿಕರು, ಅಮೃತಾಪುರ ಗ್ರಾಮದ ಮುರುಗೇಶ್ ಎಂಬುವವರಿಗೆ ಸೇರಿದ ಅಡಿಕೆ ತೋಟದಲ್ಲಿ ಕೆಲಸಕ್ಕೆ ಹೋಗಿದ್ದರು.
ಆದರೆ, ತೋಟದ ಮನೆಯ ನೀರಿನ ತೊಟ್ಟಿಯಲ್ಲಿ ಇಬ್ಬರ ಮೃತದೇಹ ಪತ್ತೆಯಾಗಿದ್ದು, ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಆಕಸ್ಮಿಕವಾಗಿ ನೀರಿನ ತೊಟ್ಟಿಗೆ ಬಿದ್ದು ಮೃತಪಟ್ಟಿರಬಹುದೆಂಬ ಶಂಕೆ ವ್ಯಕ್ತವಾಗಿದೆ.
ಇದು ಆಕಸ್ಮಿಕ ಸಾವೇ, ಆತ್ಮಹತ್ಯೆಯೇ ಅಥವಾ ಕೊಲೆಯೇ ಎಂಬುದು ಇನ್ನೂ ಸ್ಪಷ್ಟವಾಗಿಲ್ಲ. ಇಬ್ಬರ ಮೃತದೇಹಗಳನ್ನು ತರೀಕೆರೆ ಸರ್ಕಾರಿ ಆಸ್ಪತ್ರೆಗೆ ರವಾನಿಸಲಾಗಿದೆ.
ಇಬ್ಬರು ಕಾರ್ಮಿಕರ ಸಾವು ಹಲವು ಅನುಮಾನಗಳಿಗೆ ಕಾರಣವಾಗಿದ್ದು, ಪೊಲೀಸ್ ತನಿಖೆಯಿಂದಷ್ಟೇ ಸಾವಿನ ಹಿಂದಿನ ಸತ್ಯ ಹೊರಬರಬೇಕಿದೆ.




