ಚಿಕ್ಕಮಗಳೂರು: ಹಾಸನ ಜಿಲ್ಲೆಯಿಂದ ಕಾಡಾನೆಗಳನ್ನು ಚಿಕ್ಕಮಗಳೂರು ಜಿಲ್ಲೆಗೆ ಸ್ಥಳಾಂತರಿಸಿ, ಭದ್ರಾ ಅಭಯಾರಣ್ಯದತ್ತ ಓಡಿಸುವ ಅರಣ್ಯ ಇಲಾಖೆಯ ಕಾರ್ಯಾಚರಣೆಗೆ ಮಲೆನಾಡು ಭಾಗದ ಮೂವರು ಶಾಸಕರು ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ. ಅರಣ್ಯ ಇಲಾಖೆಯ ನಡೆಗೆ ಆಕ್ರೋಶಗೊಂಡಿರುವ ಮೂವರು ಶಾಸಕರು ರಾಜೀನಾಮೆ ನೀಡುವ ಎಚ್ಚರಿಕೆ ನೀಡಿದ್ದಾರೆ.
ಮೂಡಿಗೆರೆ ಕ್ಷೇತ್ರದ ಶಾಸಕಿ ನಯನಾ ಮೋಟಮ್ಮ, ಶೃಂಗೇರಿ ಶಾಸಕ ಟಿ.ಡಿ. ರಾಜೇಗೌಡ ಹಾಗೂ ಚಿಕ್ಕಮಗಳೂರು ಶಾಸಕ ತಮ್ಮಯ್ಯ ಅವರು ಅರಣ್ಯ ಸಚಿವ ರಾಮಲಿಂಗ ರೆಡ್ಡಿ ಅವರಿಗೆ ದೂರವಾಣಿ ಮೂಲಕ ಮಾತನಾಡಿ, ತಮ್ಮ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಶಾಸಕಿ ನಯನಾ ಮೋಟಮ್ಮ ಅವರು ರಾಜೀನಾಮೆ ನೀಡುವ ಎಚ್ಚರಿಕೆಯನ್ನು ಸಚಿವರಿಗೆ ನೀಡಿದ್ದಾರೆ ಎನ್ನಲಾಗಿದೆ.
ನವೆಂಬರ್ 25ರವರೆಗೆ ಯಾವುದೇ ಕಾಡಾನೆ ಸ್ಥಳಾಂತರ ಕಾರ್ಯಾಚರಣೆ ನಡೆಸುವುದಿಲ್ಲ ಎಂದು ಅರಣ್ಯ ಇಲಾಖೆ ಭರವಸೆ ನೀಡಿತ್ತು. ಆದರೆ, ಏಕಾಏಕಿ ರಾತ್ರೋರಾತ್ರಿ ಮೂಡಿಗೆರೆ ಭಾಗಕ್ಕೆ ಕಾಡಾನೆಗಳನ್ನು ಓಡಿಸಿರುವುದು ಶಾಸಕರ ಆಕ್ರೋಶಕ್ಕೆ ಕಾರಣವಾಗಿದೆ. ಕೊಟ್ಟ ಮಾತನ್ನು ಉಳಿಸಿಕೊಳ್ಳುವಲ್ಲಿ ಅರಣ್ಯ ಇಲಾಖೆ ಹಾಗೂ ಜಿಲ್ಲಾಡಳಿತ ವಿಫಲವಾಗಿವೆ ಎಂದು ಶಾಸಕರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಈ ಸಂಬಂಧ ಶಾಸಕಿ ನಯನಾ ಮೋಟಮ್ಮ ಅವರು ಅರಣ್ಯ ಇಲಾಖೆಯ ಪಿಸಿಸಿಎಫ್ (PCCF) ಹಾಗೂ ಅರಣ್ಯ ಸಚಿವ ರಾಮಲಿಂಗ ರೆಡ್ಡಿ ಅವರಿಗೆ ದೂರವಾಣಿ ಕರೆ ಮಾಡಿದ್ದಾರೆ. ಅಲ್ಲದೆ, ಸಚಿವರಿಗೆ ರಾಜೀನಾಮೆ ನೀಡುವ ಎಚ್ಚರಿಕೆಯ ಸಂದೇಶವನ್ನೂ ರವಾನಿಸಿದ್ದಾರೆ ಎನ್ನಲಾಗಿದೆ.
ಮೂಡಿಗೆರೆ ತಾಲೂಕಿನ ಗೋಣಿಬೀಡು ಹೋಬಳಿಯ 20ಕ್ಕೂ ಅಧಿಕ ಗ್ರಾಮಗಳಲ್ಲಿ ಈಗಾಗಲೇ ಕಾಡಾನೆಗಳ ಉಪಟಳದಿಂದ ಜನರು ತೀವ್ರ ಸಂಕಷ್ಟ ಎದುರಿಸುತ್ತಿದ್ದಾರೆ. ಇಂತಹ ಸಂದರ್ಭದಲ್ಲಿ ಮತ್ತಷ್ಟು ಕಾಡಾನೆಗಳನ್ನು ಈ ಭಾಗಕ್ಕೆ ಸ್ಥಳಾಂತರಿಸುವ ನಿರ್ಧಾರ ಸ್ಥಳೀಯರ ಆತಂಕವನ್ನು ಹೆಚ್ಚಿಸಿದೆ.
ಈ ಬೆಳವಣಿಗೆಯ ಬೆನ್ನಲ್ಲೇ ಮೂವರು ಶಾಸಕರು ಇಂದು ಮಧ್ಯಾಹ್ನ 3 ಗಂಟೆಗೆ ಮಹತ್ವದ ಪತ್ರಿಕಾಗೋಷ್ಠಿ ಕರೆದಿದ್ದಾರೆ. ಪತ್ರಿಕಾಗೋಷ್ಠಿಯಲ್ಲಿ ಅರಣ್ಯ ಇಲಾಖೆಯ ಕಾರ್ಯಾಚರಣೆ, ಸರ್ಕಾರದ ಭರವಸೆ ಹಾಗೂ ಮುಂದಿನ ಹೋರಾಟದ ಕುರಿತು ಮಹತ್ವದ ವಿಚಾರಗಳನ್ನು ಬಹಿರಂಗಪಡಿಸುವ ಸಾಧ್ಯತೆಯಿದೆ.
ಕಾಡಾನೆಗಳ ಸಮಸ್ಯೆಗೆ ಶಾಶ್ವತ ಪರಿಹಾರ ಕಲ್ಪಿಸಬೇಕೆಂಬ ಸ್ಥಳೀಯರ ಒತ್ತಾಯದ ನಡುವೆ, ಶಾಸಕರ ರಾಜೀನಾಮೆ ಎಚ್ಚರಿಕೆ ಮಲೆನಾಡು ರಾಜಕೀಯದಲ್ಲಿ ತೀವ್ರ ಚರ್ಚೆಗೆ ಕಾರಣವಾಗಿದೆ.



