ಚಿಕ್ಕಮಗಳೂರು: ಟಿಪ್ಪು ನಗರದಲ್ಲಿ ಮನೆಗಳ್ಳರ ಹಾವಳಿ; ಸಿಸಿಟಿವಿಯಲ್ಲಿ ಸೆರೆಯಾದ ದೃಶ್ಯ

Spread the love

ಚಿಕ್ಕಮಗಳೂರು: ನಗರದಲ್ಲಿ ಇತ್ತೀಚಿನ ದಿನಗಳಲ್ಲಿ ಮನೆಗಳ್ಳರ ಹಾವಳಿ ಹೆಚ್ಚಾಗಿದ್ದು, ನಿವಾಸಿಗಳಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದೆ. ಮಧ್ಯರಾತ್ರಿ ಸಮಯದಲ್ಲಿ ಒಂಟಿಯಾಗಿ ಮನೆಗಳ ಬಳಿ ಬಂದು ಕಳ್ಳತನಕ್ಕೆ ಯತ್ನಿಸುವ ಘಟನೆಗಳು ಹೆಚ್ಚಾಗುತ್ತಿವೆ.

ಟಿಪ್ಪು ನಗರದ ಸರ್ವೋದಯ ವಿದ್ಯಾಲಯ ರಸ್ತೆಯಲ್ಲಿರುವ ನಿಸ್ಸಾರ್ ಎಂಬುವವರ ಮನೆಯಲ್ಲಿ ಕಳ್ಳತನಕ್ಕೆ ಯತ್ನಿಸಿರುವ ಘಟನೆ ಬೆಳಕಿಗೆ ಬಂದಿದೆ. ಕಳ್ಳನು ರಾತ್ರಿ ಪೂರ್ತಿ ಮನೆಯ ಸುತ್ತ ಹೊಂಚು ಹಾಕಿ, ಬೆಳಗಿನ ಜಾವ ಕಾಂಪೌಂಡ್ ಹತ್ತಿ ಮನೆಯೊಳಗೆ ಪ್ರವೇಶಿಸಿದ್ದಾನೆ. ಆದರೆ ಮನೆಯ ಬಾಗಿಲು ತೆರೆಯಲು ಸಾಧ್ಯವಾಗದೆ ಕೊನೆಗೆ ಖಾಲಿ ಕೈಯಲ್ಲಿ ಹಿಂದಿರುಗಿದ್ದಾನೆ.

ಈ ಘಟನೆಯ ಸಂಪೂರ್ಣ ದೃಶ್ಯ ಸಿಸಿ ಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ಇದೀಗ ಪೊಲೀಸರು ಪರಿಶೀಲನೆ ನಡೆಸುತ್ತಿದ್ದಾರೆ.

ಚಿಕ್ಕಮಗಳೂರು ನಗರದ ಇತರೆ ಪ್ರದೇಶಗಳಲ್ಲಿಯೂ ಕಳ್ಳತನ ಪ್ರಕರಣಗಳು ಹೆಚ್ಚುತ್ತಿರುವುದು ಗಮನಕ್ಕೆ ಬಂದಿದೆ.  ಗೌರಿ ಕಾಲುವೆ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಕಳ್ಳತನಗಳು ನಡೆಯುತ್ತಿರುವ ವರದಿಗಳಿವೆ. ಕೆಲವು ಸ್ಥಳಗಳಲ್ಲಿ ವಿದ್ಯುತ್ ಸಂಪರ್ಕವನ್ನು ಸ್ಥಗಿತಗೊಳಿಸಿ ಕಳ್ಳತನ ನಡೆಸುತ್ತಿರುವ ಶಂಕೆಯೂ ವ್ಯಕ್ತವಾಗಿದೆ.

ಈ ಎಲ್ಲಾ ಘಟನೆಗಳು ಚಿಕ್ಕಮಗಳೂರು ನಗರ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದು, ಪೊಲೀಸರು ತನಿಖೆ ತೀವ್ರಗೊಳಿಸಿದ್ದಾರೆ. ರಾತ್ರಿ ವೇಳೆಯಲ್ಲಿ ಎಚ್ಚರಿಕೆಯಿಂದ ಇರಲು ಹಾಗೂ ಅನುಮಾನಾಸ್ಪದ ವ್ಯಕ್ತಿಗಳ ಬಗ್ಗೆ ತಕ್ಷಣ ಮಾಹಿತಿ ನೀಡಲು ಪೊಲೀಸರು ಸಾರ್ವಜನಿಕರಿಗೆ ಮನವಿ ಮಾಡಿದ್ದಾರೆ.

Leave a Reply

Your email address will not be published. Required fields are marked *