ಚಿಕ್ಕಮಗಳೂರು: ತೋಟದಲ್ಲಿ ಕೆಲಸ ಮಾಡುತ್ತಿದ್ದ ರೈತನ ಮೇಲೆ 500ಕ್ಕೂ ಅಧಿಕ ಹೆಜ್ಜೇನುಗಳು ದಾಳಿ ನಡೆಸಿದ ಪರಿಣಾಮ ಗಂಭೀರವಾಗಿ ಗಾಯಗೊಂಡಿದ್ದ ರೈತ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿರುವ ಘಟನೆ ಚಿಕ್ಕಮಗಳೂರು ಹೊರವಲಯದ ಹಿರೇಕೊಳಲೆ ಗ್ರಾಮದಲ್ಲಿ ನಡೆದಿದೆ.
ಮೃತ ರೈತನನ್ನು ಕುಮಾರ್ ತೋಟದಲ್ಲಿ ಇಬ್ಬರು ಕಾರ್ಮಿಕರೊಂದಿಗೆ ಕೆಲಸ ಮಾಡುತ್ತಿದ್ದ ಸಂದರ್ಭದಲ್ಲಿ ಏಕಾಏಕಿ ಹೆಜ್ಜೇನುಗಳು ದಾಳಿ ನಡೆಸಿವೆ. ಕುಮಾರ್ ಅವರ ದೇಹದ ಹಲವು ಭಾಗಗಳಿಗೆ ನೂರಾರು ಹೆಜ್ಜೇನುಗಳು ಕಚ್ಚಿದ್ದು, ತೀವ್ರ ಅಸ್ವಸ್ಥಗೊಂಡಿದ್ದರು.
ದಾಳಿಯ ವೇಳೆ ಜೊತೆಯಲ್ಲಿದ್ದ ಇಬ್ಬರು ಕಾರ್ಮಿಕರ ಮೇಲೂ ಹೆಜ್ಜೇನುಗಳು ದಾಳಿ ನಡೆಸಿವೆ. ಗಂಭೀರ ಸ್ಥಿತಿಯಲ್ಲಿದ್ದ ಕುಮಾರ್ ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಆಸ್ಪತ್ರೆಗೆ ಕರೆದೊಯ್ಯುವ ಮಾರ್ಗಮಧ್ಯೆಯೇ ಅವರು ಕೊನೆಯುಸಿರೆಳೆದಿದ್ದಾರೆ.
ಘಟನೆಯಿಂದ ಕುಟುಂಬಸ್ಥರು ಹಾಗೂ ಗ್ರಾಮಸ್ಥರಲ್ಲಿ ದುಃಖ ಮಡುಗಟ್ಟಿದೆ. ಮೃತ ರೈತ ಕುಮಾರ್ ಅವರ ಪಾರ್ಥಿವ ಶರೀರವನ್ನು ನಗರದ ಬಸವನಹಳ್ಳಿ ಮುಖ್ಯ ರಸ್ತೆಯಲ್ಲಿರುವ ಅವರ ನಿವಾಸದಲ್ಲಿ ಅಂತಿಮ ದರ್ಶನಕ್ಕೆ ಇರಿಸಲಾಗಿದೆ.
ತೋಟದಲ್ಲಿ ಕೆಲಸ ಮಾಡುತ್ತಿದ್ದ ವೇಳೆ ನಡೆದ ಈ ದುರ್ಘಟನೆ ಮಲೆನಾಡಿನ ರೈತಾಪಿ ವರ್ಗದಲ್ಲಿ ಆತಂಕ ಮೂಡಿಸಿದೆ.


