ಶೃಂಗೇರಿಯಲ್ಲಿ ಕರ್ತವ್ಯದಲ್ಲಿದ್ದ ಪೊಲೀಸ್ ಕಾನ್ಸ್‌ಟೇಬಲ್ ಸತೀಶ್ (53) ಅವರು ಹೃದಯಾಘಾತದಿಂದ ಅಕಾಲಿಕ ನಿಧನ ಹೊಂದಿದ್ದಾರೆ. ಮಂಗಳವಾರ ರಾತ್ರಿ 112 ತುರ್ತು ಸೇವಾ ವಾಹನದಲ್ಲಿ ಕಾರ್ಯನಿರ್ವಹಿಸುತ್ತಿದ್ದ ವೇಳೆ ಅವರಿಗೆ ಹಠಾತ್ ಎದೆನೋವು ಕಾಣಿಸಿಕೊಂಡಿದ್ದು, ಕೂಡಲೇ ಆಸ್ಪತ್ರೆಗೆ ದಾಖಲಿಸಿದರೂ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.
ಮೂಲತಃ ಶೃಂಗೇರಿ ತಾಲೂಕಿನ ಕಿಗ್ಗಾ ಗ್ರಾಮದವರಾದ ಇವರು, ಈ ಹಿಂದೆ ಭಾರತೀಯ ಸೇನೆಯ ಮದ್ರಾಸ್ ಇಂಜಿನಿಯರಿಂಗ್ ಗ್ರೂಪ್‌ನಲ್ಲಿ (MEG) ನಾಯಿಬ್ ಸುಬೇದಾರ್ ಆಗಿ 17 ವರ್ಷಗಳ ಕಾಲ ದೇಶಸೇವೆ ಸಲ್ಲಿಸಿದ್ದರು. ಸೇನೆಯಿಂದ ನಿವೃತ್ತರಾದ ಬಳಿಕ ಕಳೆದ 10 ವರ್ಷಗಳಿಂದ ಪೊಲೀಸ್ ಇಲಾಖೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರು. ಸದ್ಯ ಹರಿಹರಪುರದಲ್ಲಿ ವಾಸವಿದ್ದ ಇವರ ಅಕಾಲಿಕ ನಿಧನಕ್ಕೆ ಪೊಲೀಸ್ ಇಲಾಖೆ ಹಾಗೂ ಸಾರ್ವಜನಿಕರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ಮೃತದೇಹವನ್ನು ಕೊಪ್ಪದ ಆಸ್ಪತ್ರೆಗೆ ರವಾನಿಸಲಾಗಿದ್ದು, ಕುಟುಂಬಸ್ಥರು ಅಂತ್ಯಕ್ರಿಯೆಗೆ ಸಿದ್ಧತೆ ನಡೆಸಿದ್ದಾರೆ.


