ಚಿಕ್ಕಮಗಳೂರು: ದೇಶದಲ್ಲಿ ದಿನೇ ದಿನೇ ಗಗನಕ್ಕೇರುತ್ತಿರುವ ಪೆಟ್ರೋಲ್, ಡೀಸೆಲ್ ಮತ್ತು ಗ್ಯಾಸ್ ಬೆಲೆ ಏರಿಕೆಯನ್ನು ಖಂಡಿಸಿ, ಕೇಂದ್ರ ಸರ್ಕಾರದ ವಿರುದ್ಧ ಚಿಕ್ಕಮಗಳೂರು ಜಿಲ್ಲಾ ಕಾಂಗ್ರೆಸ್ ವತಿಯಿಂದ ಇಂದು ನಗರದಲ್ಲಿ ಬೃಹತ್ ಹಾಗೂ ವಿನೂತನ ಪ್ರತಿಭಟನೆ ನಡೆಸಲಾಯಿತು.
ಬೆಲೆ ಏರಿಕೆಯಿಂದ ತತ್ತರಿಸಿರುವ ಸಾರ್ವಜನಿಕರ ಆಕ್ರೋಶವನ್ನು ಜನಪ್ರತಿನಿಧಿಗಳಿಗೆ ಮುಟ್ಟಿಸುವ ಸಲುವಾಗಿ ಕಾಂಗ್ರೆಸ್ ಕಾರ್ಯಕರ್ತರು ಹಮ್ಮಿಕೊಂಡಿದ್ದ ಈ ಪ್ರತಿಭಟನೆ ಸಾರ್ವಜನಿಕರ ಗಮನ ಸೆಳೆಯಿತು.
ಪ್ರತಿಭಟನೆಯ ಭಾಗವಾಗಿ ಕಾಂಗ್ರೆಸ್ ನಾಯಕರು ಮತ್ತು ಕಾರ್ಯಕರ್ತರು ಕೇಂದ್ರ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗುತ್ತಾ ವಿನೂತನ ಪ್ರತಿಭಟನೆ ನಡೆಸಿದರು . ಇಂಧನ ಬೆಲೆ ಏರಿಕೆಯಿಂದಾಗಿ ವಾಹನಗಳನ್ನು ಬಳಸಲಾಗದ ಪರಿಸ್ಥಿತಿ ನಿರ್ಮಾಣವಾಗಿದೆ ಎಂಬುದನ್ನು ಬಿಂಬಿಸಲು ಕಾರಿಗೆ ಹಗ್ಗ ಕಟ್ಟಿ ರಸ್ತೆಯಲ್ಲಿ ಎಳೆದುಕೊಂಡು ಹೋಗುವ ಮೂಲಕ ಆಕ್ರೋಶ ವ್ಯಕ್ತಪಡಿಸಿದರು. ಅಷ್ಟೇ ಅಲ್ಲದೆ, ಪ್ರಮುಖ ನಾಯಕರು ಎತ್ತಿನಗಾಡಿಯಲ್ಲಿ ಸಂಚರಿಸುತ್ತಾ ಕೇಂದ್ರ ಸರ್ಕಾರದ ನೀತಿಗಳ ವಿರುದ್ಧ ತೀವ್ರ ಅಸಮಾಧಾನ ಹೊರಹಾಕಿದರು.
ಚಿಕ್ಕಮಗಳೂರು ನಗರದ ಹನುಮಂತಪ್ಪ ವೃತ್ತದಲ್ಲಿ ಜಮಾಯಿಸಿದ ಪ್ರತಿಭಟನಾಕಾರರು ಅಲ್ಲಿಂದ ಮೆರವಣಿಗೆ ಆರಂಭಿಸಿದರು. ಹನುಮಂತಪ್ಪ ವೃತ್ತದಿಂದ ಆಜಾದ್ ಪಾರ್ಕ್ ವೃತ್ತದವರೆಗಿನ ಸುಮಾರು 2 ಕಿಲೋಮೀಟರ್‌ಗೂ ಅಧಿಕ ದೂರದ ಈ ಬೃಹತ್ ಪ್ರತಿಭಟನಾ ಮೆರವಣಿಗೆಯಲ್ಲಿ ಕೇಂದ್ರ ಸರ್ಕಾರದ ಜನವಿರೋಧಿ ನೀತಿಗಳ ವಿರುದ್ಧ ಸಾಲು ಸಾಲು ಘೋಷಣೆಗಳು ಕೂಗಿದರು
ಜಿಲ್ಲಾ ಕಾಂಗ್ರೆಸ್ ನೇತೃತ್ವದಲ್ಲಿ ನಡೆದ ಈ ಬೃಹತ್ ಪ್ರತಿಭಟನೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಹಾಗೂ ಸ್ಥಳೀಯ ಮುಖಂಡರು ಭಾಗವಹಿಸಿದ್ದರು. “ಸಾಮಾನ್ಯ ಜನರ ಬದುಕು ದುಸ್ತರವಾಗುತ್ತಿದ್ದು, ತಕ್ಷಣವೇ ಕೇಂದ್ರ ಸರ್ಕಾರ ಇಂಧನ ಮತ್ತು ಗ್ಯಾಸ್ ದರಗಳನ್ನು ಇಳಿಸಬೇಕು, ಇಲ್ಲದಿದ್ದರೆ ಮುಂದಿನ ದಿನಗಳಲ್ಲಿ ಪ್ರತಿಭಟನೆ ಮತ್ತಷ್ಟು ತೀವ್ರಗೊಳ್ಳಲಿದೆ” ಎಂದು ಪ್ರತಿಭಟನಾ ನಿರತ ನಾಯಕರು ಎಚ್ಚರಿಕೆ ನೀಡಿದ್ದಾರೆ.

